ಆರೋಗ್ಯ ಸುರಕ್ಷತೆಯೊಂದಿಗೆ ಸಿ.ಇ.ಟಿ ಪರೀಕ್ಷೆ: ಕವಿತ ರಾಜರಾಂ


ಹಾಸನ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಜು.30 ಮತ್ತು 31 ರಂದು ನಡೆಯಲಿರುವ ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ ಸೂಚನೆ ನೀಡಿದರು.
ನಗರದ ಎ.ವಿ.ಕೆ. ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಿ.ಇ.ಟಿ ಪೂರ್ವಭಾವಿ ಸಿದ್ಧತೆ ಬಗ್ಗೆ ಪರಿಶೀಲನಾ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಕೊವೀಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗರಿಷ್ಠ ಕಾಳಜಿ ವಹಿಸಿ ಪರೀಕ್ಷೆ ನಡೆಸಿ ಎಂದು ನಿರ್ದೇಶನ ನೀಡಿದರು.

ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದೆ ಎಲ್ಲರೂ ಕಟ್ಟುನಿಟ್ಟಾಗಿ ತಮ್ಮ ಜವಾಬ್ದಾರಿಗಳನ್ನು ಪಾಲನೆ ಮಾಡಬೇಕು. ಪರೀಕ್ಷೆಯ ಸಂದರ್ಭದಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸೇಷನ್, ಹಾಗೂ ಕಂಟೋನ್‍ಮೆಂಟ್ ವಲಯಗಳಿಂದ ಬರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
 ಪರೀಕ್ಷಾ ಕೇಂದ್ರದ ಪ್ರತೀ ಕೊಠಡಿಯಲ್ಲಿ ಕೇವಲ 24 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಯಾವುದೇ ವಿದ್ಯಾರ್ಥಿಯು ಕೊರೋನಾ ಸೋಂಕಿತರಾಗಿದ್ದಲ್ಲಿ ಅವರು ಸಿ.ಇ.ಟಿ ಪೋರ್ಟಲ್‍ನಲ್ಲಿ ನಮೂದಿಸಿಕೊಂಡು ಕೋವಿಡ್ ಕೇರ್ ಸೆಂಟರ್‍ನಲ್ಲಿಯೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ.ಕೆ ಶ್ರೀನಿವಾಸ್ ಅವರು ಮಾತನಾಡಿ ಸಿ.ಸಿ.ಟಿ.ವಿ ಕ್ಯಾಮರಾ ವ್ಯವಸ್ಥೆಯೊಂದಿಗೆ ಇತರೆ ಅಗತ್ಯ ವ್ಯವಸ್ಥೆಗಳನ್ನೂ ಸಹ ಮಾಡಲಾಗುವುದು ಸೋಂಕಿತ ವಿದ್ಯಾರ್ಥಿಯು ಕೋವಿಡ್ ಕೇರ್ ಸೆಂಟರ್‍ನಲ್ಲಿ ಪರೀಕ್ಷೆ ಬರೆಯಲು ಸಿ.ಸಿ.ಟಿ.ವಿ ಜೊತೆಗೆ ಇತರೆ ವ್ಯವಸ್ಥೆಗಳನ್ನೂ ಸಹ ಮಾಡಲಾಗಿದ್ದು, ಸೋಂಕಿತ ವಿದ್ಯಾರ್ಥಿಯ ಕೋಣೆಗೆ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ನೇಮಿಸಲಾಗಿರುತ್ತದೆ. ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆಯೂ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.
ಕಂಟೈನ್‍ಮೆಂಟ್ ವಲಯಗಳಿಂದ ಬರುವ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಎನ್-95 ಮಾಸ್ಕ್‍ಗಳನ್ನು ನೀಡಲಾಗುವುದು ಎಂದರಲ್ಲದೆ, ಪರೀಕ್ಷೆ ಪ್ರಾರಂಭವಾಗುವ ಮುನ್ನ, ಪರೀಕ್ಷೆ ಪ್ರಾರಂಭಾವಾದ ನಂತರ ಹಾಗೂ ಪರೀಕ್ಷೆ ಮುಗಿದ ನಂತರ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಯಾವ ಯಾವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಹಾಗೂ ಯಾವ ರೀತಿ ಪರೀಕ್ಷೆ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ವಿವಿಧ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಮತ್ತಿತರರು ಹಾಜರಿದ್ದರು.

Post a Comment

0 Comments